ಬೆಂಗಳೂರು: ನೀಟ್ ಪರೀಕ್ಷೆಯನ್ನು ರದ್ದು ಪಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮುಂಬರುವ ವಿಧಾನಸಭೆಯಲ್ಲಿ ಅಂಗೀಕರಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಮ್ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಮೋಹನ್ ದಾಸರಿ ಒತ್ತಾಯಿಸಿದ್ದಾರೆ.
ಈ ಸಂಬಂಧ ಸಿಎಂಗೆ ಪತ್ರ ಬರೆದಿರುವ ಅವರು, ನಮ್ಮ ರಾಜ್ಯಕ್ಕೆ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಬೇಡ. ನೀಟ್ ನ್ಯಾಯಯುತ ಪರೀಕ್ಷೆಯಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ ಮತ್ತು ನೀಟ್‌ನಿಂದ ವಿದ್ಯಾರ್ಥಿಗಳು ತುಂಬಾ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.
ಅಲ್ಲದೆ ಒಂದೆಡೆ ಪ್ರಶ್ನೆ ಪತ್ರಿಕೆ ಸೋರಿಕೆ, ಇನ್ನೊಂದೆಡೆ ಅಸಮರ್ಪಕ ಗ್ರೇಸ್ ಮಾರ್ಕ್ ಹಂಚಿಕೆ, ಈ ಎಲ್ಲ ಅವಾಂತರಗಳ ಮಧ್ಯೆ ಪರೀಕ್ಷೆಯ ಹಠಾತ್ ಮುಂದೂಡಿಕೆಯಂತಹ ತೊಡಕುಗಳಿಂದ ಕರ್ನಾಟಕ ಸೇರಿದಂತೆ ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆ ತಮಿಳುನಾಡು ಮಾದರಿಯಲ್ಲಿ ನಿರ್ಣಾಯಕ ಹೋರಾಟ ಕೈಗೊಳ್ಳಬೇಕು ಎಂದು ಮೋಹನ್ ದಾಸರಿ ಒತ್ತಾಯಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಸರ್ಕಾರ ನೀಟ್ ರದ್ದು ಪಡಿಸುವಂತೆ ಹಾಗೂ 12ನೇ ತರಗತಿಯ ಅಂಕಗಳ ಆಧಾರದ ಮೇಲೆ ರಾಜ್ಯ ಸರ್ಕಾರಗಳು ವೈದ್ಯಕೀಯ ಪ್ರವೇಶವನ್ನು ನಡೆಸುವ ಹಿಂದಿನ ವ್ಯವಸ್ಥೆ ಮರುಸ್ಥಾಪಿಸಬೇಕು ಎಂದು ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯ ಸರ್ವಾನುಮತದಿಂದ ಅಂಗೀಕರಿಸಿದೆ. ಇದೇ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ನಿರ್ಣಯವನ್ನು ತೆಗೆದುಕೊಳ್ಳಬೇಕು. ದೇಶಕ್ಕೆ ಮಾದರಿಯಾಗಿರುವ ಸಿಇಟಿ ಪರೀಕ್ಷೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರವನ್ನು ವಿರೋಧಿಸಬೇಕು ಎಂಬ ಕಾರಣಕ್ಕೆ ನೀಟ್ ಪರೀಕ್ಷೆ ಅಕ್ರಮಗಳ ವಿರುದ್ಧ ರಾಜಕೀಯ ಹೇಳಿಕೆಗಳನ್ನು ನೀಡುತ್ತ ಸಮಯ ಕಳೆಯದೆ ವಿಧಾನಸಭೆಯಲ್ಲಿ ನೀಟ್ ರದ್ದು ಪಡಿಸುವಂತೆ ಒತ್ತಾಯಿಸಿ ನಿರ್ಣಯವನ್ನು ಮಂಡಿಸಬೇಕು ಎಂದು ಹೇಳಿದ್ದಾರೆ.
ಇನ್ನು ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ವಾನುಮತದ ನಿರ್ಣಯ ಕೈಗೊಳ್ಳಬೇಕು. ಈ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ನೆರವಿಗೆ ಧಾವಿಸಬೇಕು ಎಂಬುದು ಆಮ್ ಆದ್ಮಿ ಪಕ್ಷದ ಒತ್ತಾಯವಾಗಿದೆ. ನಮ್ಮ ಮನವಿಗೆ ಸ್ಪಂದಿಸುವಿರಿ ಎಂಬ ಭರವಸೆಯನ್ನು ಇರಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.