ಕಲಬುರಗಿ: ಪಿಎಸ್‌ಐ ಅಕ್ರಮದ ವಾಸನೆ ಆರಂಭವಾದ ಜಿಲ್ಲೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದ ರಚನಾ ಹನುಮಂತ (25) ಅವರನ್ನು ಸಿಐಡಿ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
ಪಿಎಸ್ಐ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮವಾಗಿ ಒಎಂಆರ್ ಉತ್ತರ ಪತ್ರಿಕೆಯಲ್ಲಿ ತಿದ್ದುಪಡಿ ಮಾಡಿಸಿ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ರ್‍ಯಾಂಕ್ ಪಡೆದಿದ್ದರು ರಚನಾ ಹನುಮಂತ ಎಂಬ ಆರೋಪ ಕೇಳಿ ಬಂದಿದೆ.
ಈ ಹಿನ್ನೆಲೆಯಲ್ಲಿ ಇಂದು ಅವರನ್ನು ಬಂಧಿಸಲಾಗಿದ್ದು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮೂರುವರೆ ತಿಂಗಳಿಂದ ಪೊಲೀಸರ ಕಣ್ಣುತಪ್ಪಿಸಿ ಓಡಾಡುತ್ತಿದ್ದ ರಚನಾ ಒಂದೆಡೆ ನೆಲೆ ನಿಲ್ಲದೇ ವಿವಿಧ ಕಡೆಗಳಲ್ಲಿ ವಾಸ್ತವ್ಯ ಹೂಡುತ್ತಿದ್ದರು.
ಆದರೆ, ಬೆಂಗಳೂರು, ಕಲಬುರಗಿ ಸಿಐಡಿ ಅಧಿಕಾರಿಗಳು ಧೃತಿಗೆಡದೆ ನಿರಂತರವಾಗಿ ಹುಡುಕಾಟ ನಡೆಸುತ್ತಿದ್ದರು. ಮಹಾರಾಷ್ಟ್ರ ಗಡಿಯಲ್ಲಿರುವ ಜಿಲ್ಲೆಯ ಆಳಂದ ತಾಲೂಕಿನ ಹಿರೋಳ್ಳಿ ಚೆಕ್‌ಪೋಸ್ಟ್ ಬಳಿ ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಹಾಗೂ ಸಿಐಡಿ ಡಿಟೆಕ್ಟಿವ್ ಸಬ್ ಇನ್‌ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡವು ರಚನಾ ಅವರನ್ನುಇಂದು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಬಳಿಕ ನಗರದ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿತು.
ಬೆಂಗಳೂರಿನಲ್ಲಿ ರಚನಾ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರಿಂದ ನ್ಯಾಯಾಧೀಶ ದಸ್ತಗೀರಸಾಬ್ ಮುಲ್ಲಾ ಅವರ ನ್ಯಾಯಪೀಠದ ಮುಂದೆ ಹಾಜರು ಪಡಿಸಿ ಬಳಿಕ ಟ್ರಾನ್ಸಿಟ್ ವಾರೆಂಟ್ ಪಡೆದ ಸಿಐಡಿ ಅಧಿಕಾರಿಗಳು ಶನಿವಾರ ಸಂಜೆ ಬೆಂಗಳೂರಿಗೆ ಕರೆದೊಯ್ದರು.
ಪಿಎಸ್‌ಐ ಅಕ್ರಮ ನಡೆದ ಆರೋಪ ಕೇಳಿ ಬಂದಾಗ ಸರ್ಕಾರ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಕ್ರಮ ಖಂಡಿಸಿ ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆಯಲ್ಲಿ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯ ರಚನಾ ಮುಂಚೂಣಿಯಲ್ಲಿದ್ದರು. ಆದರೆ, ತನ್ನ ವಿರುದ್ದವೇ ಎಫ್‌ಐಆರ್ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದರು.
ಆದರೆ, ನಿರಂತವಾಗಿ ಶೋಧಕಾರ್ಯ ನಡೆಸಿದ ಸಿಐಡಿ ಅಧಿಕಾರಿಗಳು ಕೊನೆಗೂ ರಚನಾರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.