ಬೆಂಗಳೂರು: ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಹೀಗಾಗಿ ರಾಜ್ಯ ಮಹಿಳೆಯರು ಆತಂಕಕ್ಕೆ ಒಳಗಾಗುವ ಅಗತ್ಯ ಬರುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಶಕ್ತಿ ಯೋಜನೆ ನಿಲ್ಲುತ್ತದೆ ಎಂಬ ಊಹಪೋಹಗಳಿಗೆ ಸ್ಪಷ್ಟನೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರ (Congress Government) ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ ಎಂದು ಹೇಳಿದರು.
ಇನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿದ್ದ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡುವುದಕ್ಕೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದರಿಂದ ಬಡ, ಮಧ್ಯಮ ವರ್ಗದವರಿಗೆ ಸಹಾಯ ಆಗಿದೆ ಎಂದು ತಿಳಿಸಿದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಕ್ತಿ ಯೋಜನೆಗಾಗಿ ಬಜೆಟ್ ನಲ್ಲಿ ಸುಮಾರು 5,500 ಕೋಟಿ ರೂ. ಮೀಸಲಿಟ್ಟಿದ್ದಾರೆ. ಶಕ್ತಿ ಯೋಜನೆಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಅಂದಮೇಲೆ ನೀವು ಆತಂಕ ಪಡುವುದು ಏತಕ್ಕೆ ಎಂದು ಪ್ರಶ್ನಿಸಿದರು.
ಇನ್ನು ನಮ್ಮ ಕಾಂಗ್ರೆಸ್ ಸರ್ಕಾರ ಇರುವವರೆಗೂ ಶಕ್ತಿ ಯೋಜನೆ ಇರುತ್ತದೆ. ಯಾರಿಗೂ ಅನುಮಾನ ಬೇಡ. ಮುಂದೆಯೂ ಸಹ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಆಗಲೂ ಶಕ್ತಿ ಯೋಜನೆ ಮುಂದುವರಿಯಲಿದೆ ಎಂದು ಸ್ಪಷ್ಟ ಪಡಿಸಿದರು.