ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ “ಕೋಟಿ ಕಂಠಗಳ ಗಾಯನ” ಕಾರ್ಯಕ್ರಮವನ್ನು ಅಕ್ಟೋಬರ್ 28 ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದ ಐತಿಹಾಸಿಕ ಸ್ಥಳವಾದ ಶ್ರೀ ತಿಮ್ಮರಾಯಸ್ವಾಮಿ ಬೆಟ್ಟದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
“ಕೋಟಿ ಕಂಠಗಳ ಗಾಯನ” ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆ ‘ಬಾರಿಸು ಕನ್ನಡ ಡಿಂಡಿಮವ’, ಹುಯಿಲಗೋಳ ನಾರಾಯಣರಾಯರ ‘ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು’, ಡಾ. ಡಿ.ಎಸ್.ಕರ್ಕಿಯವರ ‘ಹಚ್ಚೇವು ಕನ್ನಡದ ದೀಪ’, ನಾಡೋಜ ಡಾ. ಚೆನ್ನವೀರ ಕಣವಿಯವರ ‘ವಿಶ್ವವಿನೂತನ ವಿದ್ಯಾಚೇತನ’ ಹಾಗೂ ಡಾ. ಹಂಸಲೇಖರವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಈ ಕನ್ನಡ ಗೀತೆಗಳನ್ನು ಹಾಡಲು ಅವಕಾಶ ಕಲ್ಪಿಸಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ,ವೈದಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸುಧಾಕರ್, ಪೌರಾಡಳಿತ, ಸಣ್ಣ ಕೈಗಾರಿಕೆಗಳ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜ(ಎಂಟಿಬಿ), ಸಂಸದರಾದ ಬಿ.ಎನ್.ಬಚ್ಚೇಗೌಡ ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಹಾಗೂ ಜನ ಪ್ರತಿನಿಧಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಜಿಲ್ಲೆಯ ಎಲ್ಲ ಶಾಲಾ-ಕಾಲೇಜು, ಗ್ರಾಮ ಪಂಚಾಯಿತಿ ಸೇರಿದಂತೆ ಅನೇಕ ಕಡೆ “ಕೋಟಿ ಕಂಠಗಳ ಗಾಯನ” ಕಾರ್ಯಕ್ರಮ ನಡೆಯಲಿದ್ದು ಕಲಾವಿದರು, ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.