
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ (ಮಾರ್ಚ್ 21) ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಏ. 4ರವರೆಗೆ ನಡೆಯಲಿದೆ. ಈ ಬಾರಿ ಪರೀಕ್ಷೆಯಲ್ಲಿ ಒಟ್ಟು 8,96,447 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ.
ಇಂದು ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ವಿಜಯಪಥ ಡಿಜಿಟಲ್ ಮೀಡಿಯಾದಿಂದ ಆಲ್ ದಿ ಬೆಸ್ಟ್. ಯಾವುದೇ ಭಯ, ಗೊಂದಲವಿಲ್ಲದೆ ಅರಾಮವಾಗಿ ಪರೀಕ್ಷೆ ಬರೆದು ಗೆದ್ದು ಬನ್ನಿ ಎಂದು ಹಾರೈಸುತ್ತೇವೆ.
ಪ್ರಸಕ್ತ ಸಾಲಿನಲ್ಲಿ 8,42,817 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಓದುತ್ತಿದ್ದಾರೆ. ಇವರನ್ನು ಹೊರತುಪಡಿಸಿ 38,091 ಪುನರಾವರ್ತಿತ ಮತ್ತು 15,539 ಖಾಸಗಿ ಸೇರಿ ಒಟ್ಟು 8,96,447 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ 3,35,468 ಬಾಲಕರು ಮತ್ತು 3,78,389 ಬಾಲಕಿಯರು ಇದ್ದಾರೆ. ಹಾಗೆಯೇ ಐವರು ತೃತೀಯ ಲಿಂಗಿಗಳು ಇದ್ದಾರೆ.
ರಾಜ್ಯದ 2818 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 896,447 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ (KSEAB) ಏ.4ರವರೆಗೆ ಪರೀಕ್ಷೆಯನ್ನು ನಡೆಸಲಿದೆ. ಪರೀಕ್ಷೆಯ ಸಮಯ ಬೆಳಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಇರುತ್ತದೆ.
ವಿದ್ಯಾರ್ಥಿಗಳು ತಮ್ಮ ಪರೀಕ್ಷೆ ಪ್ರವೇಶ ಪತ್ರದ ಜತೆಗೆ ಮಾನ್ಯವಾದ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರಕ್ಕೆ ತರಬೇಕು.ಇನ್ನು ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಫೋನ್‌ಗಳನ್ನು ತರಬಾರದು. ಪರೀಕ್ಷೆಯಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ವೆಬ್ ಸ್ಟ್ರೀಮಿಂಗ್ ವ್ಯವಸ್ಥೆ ಮಾಡಲಾಗಿದೆ.
ಮಾರ್ಚ್ 21 ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ, ಮಾ.24-ಗಣಿತ, ಮಾ.26-ದ್ವಿತೀಯ ಭಾಷೆಗಳಾದ ಇಂಗ್ಲಿಷ್, ಕನ್ನಡ, ಮಾ.29-ಸಮಾಜ ವಿಜ್ಞಾನ, ಏ.1-ಅರ್ಥಶಾಸ್ತ್ರ, ಇಂಜಿನಿಯರಿಂಗ್ ವಿಷಯಗಳು, ಏ.2-ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ ಹಾಗೂ ಏ.4-ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್‌ಎಸ್‌ಕ್ಯೂಎಫ್ ವಿಷಯಗಳು.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಈ ಕೆಳಗಿನ ಸೂಚನೆಗಳನ್ನು ಪಾಲಿಸಬೇಕು: ವಿದ್ಯಾರ್ಥಿಗಳು ಪರೀಕ್ಷೆ ಪ್ರಾರಂಭವಾಗುವ ಕನಿಷ್ಠ 30 ನಿಮಿಷಗಳ ಮೊದಲು ಪರೀಕ್ಷಾ ಕೇಂದ್ರವನ್ನು ತಲುಪಬೇಕು, ಇದರಿಂದಾಗಿ ವಿದ್ಯಾರ್ಥಿಗಳು ಸಕಾಲಿಕ ಪ್ರವೇಶವನ್ನು ಖಚಿತಪಡಿಸಿಕೊಳ್ಳಬಹುದು. ಎಸ್ಸೆಸ್ಸೆಲ್ಸಿ ಪರೀಕ್ಷೆ ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗುತ್ತದೆ. ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪತ್ರದ ಜತೆಗೆ ಮಾನ್ಯವಾದ ಗುರುತಿನ ಚೀಟಿಯನ್ನು ತರಬೇಕು. ಮೊಬೈಲ್ ಫೋನ್ ನಿಷೇಧ.