ರೈತ ಮುಖಂಡ ಕುರುಬೂರು ಶಾಂತಕುಮಾರ್ ಆಸ್ಪತ್ರೆ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕು: ಜಂಟಿ ಹೇಳಿಕೆಯಲ್ಲಿ ಒತ್ತಾಯ


ಮೈಸೂರು: ರಾಜ್ಯದ ರೈತರ ಹಿತಕ್ಕಾಗಿ ಸೇವೆ ಸಲ್ಲಿಸುತ್ತಾ ಬದುಕನ್ನು ಕಳೆದಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರ ಆಸ್ಪತ್ರೆಯ ಎಲ್ಲ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ.
ಈ ಸಂಬಂಧ ಇಂದು ಜಂಟಿ ಹೇಳಿಕೆ ನೀಡಿರುವ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್ ಹಾಗೂ ಜಿಲ್ಲಾ ಉಪಾಧ್ಯಕ್ಷ ಮಾರ್ಬಳ್ಳಿ ನೀಲಕಂಠಪ್ಪ ಅವರು, ರಾಜ್ಯದ ರೈತರ ಹಿತಕ್ಕಾಗಿ ಸೇವೆ ಸಲ್ಲಿಸುತ್ತಾ ಬದುಕನ್ನು ಕಳೆದಿರುವ ರೈತ ಮುಖಂಡ ರೈತ ರತ್ನ ಕುರುಬೂರು ಶಾಂತಕುಮಾರ್ ಅವರು ಫೆಬ್ರವರಿ 14 ರಂದು ಚಂಡೀಗಢದಲ್ಲಿ ಕೇಂದ್ರ ಸರ್ಕಾರ ಕರೆದಿದ್ದ ಸಭೆಯಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ ಕಾರು ಅಪಘಾತಕ್ಕೀಡಾಗಿ ಇನ್ನು ಅಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಅಂದಿನ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತುರ್ತು ಕ್ರಮ ಕೈಗೊಂಡು ಏರ್ ಆಂಬುಲೆನ್ಸ್ ಮೂಲಕ ಚಂಡೀಗಢದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಿ ಶಸ್ತ್ರ ಚಿಕಿತ್ಸೆ ಮಾಡಿಸಿ ಇದರ ಸಂಪೂರ್ಣ ವೆಚ್ಚವನ್ನು ಭರಿಸಿರುವುದಕ್ಕಾಗಿ ರಾಜ್ಯದ ರೈತರ ಪರವಾಗಿ ಧನ್ಯವಾದಗಳನ್ನು ತಿಳಿಸುತ್ತೇವೆ.
ಬೆನ್ನುಮೂಳೆ ಶಸ್ತ್ರ ಚಿಕಿತ್ಸೆಗೆ ಒಳಗಾದ ಕುರುಬೂರು ಶಾಂತಕುಮಾರ್ ಅವರು ಮುಂದುವರಿದ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಯ ವೈದ್ಯರ ಸೂಚನೆಯಂತೆ ಸುಖಿನೋ ಆಸ್ಪತ್ರೆಗೆ ಸ್ಥಳಾಂತರಗೊಂಡು ಕಳೆದ ನಾಲ್ಕೂವರೆ ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದು ಹಂತ ಹಂತವಾಗಿ ಗುಣಮುಖರಾಗುತ್ತಿದ್ದಾರೆ ನಾಲ್ಕೂವರೆ ತಿಂಗಳ ಅವಧಿಯ ಆಸ್ಪತ್ರೆಯ ವೆಚ್ಚವೂ ದುಬಾರಿಯಾಗಿರುವ ಕಾರಣ ರಾಜ್ಯ ಸರ್ಕಾರವೇ ಈ ವೆಚ್ಚವನ್ನು ಭರಿಸಬೇಕು ಎಂದು ಮನವಿ ಮಾಡಿದ್ದಾರೆ.
ಅಲ್ಲದೆ ಈ ಹಿಂದೆ ಮಣಿಪಾಲ್ ಆಸ್ಪತ್ರೆಯಲ್ಲಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿ ಆತ್ಮಸ್ಥೈರ್ಯ ತುಂಬಿ ಗುಣಮುಖರಾಗುವ ತನಕ ಸರ್ಕಾರವೇ ಎಲ್ಲವನ್ನು ನೋಡಿಕೊಳ್ಳಲಿದೆ ಎಂದು ಭರವಸೆ ನೀಡಿದ್ದರು ಅದರಂತೆ ಮುಖ್ಯಮಂತ್ರಿಗಳು ವಿಶೇಷ ಗಮನ ಹರಿಸಬೇಕೆಂದು ಮನವಿ ಮಾಡಿದ್ದಾರೆ.
Related
