ಬೆಂಗಳೂರು: ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ತಮ್ಮ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು ರೂ.34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಿ ಮಾತನಾಡಿದರು.
ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನಕ ಅಧ್ಯಯನ ಪೀಠ ಸಮನ್ವಯದಿಂದ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗುವುದು ಎಂದರು.
ಪ್ರಾಧಿಕಾರದಲ್ಲಿ ಸಂಚಿತ ನಿಧಿಯನ್ನು ಸ್ಥಾಪಿಸಿ ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಪ್ರಾಧಿಕಾರದ ಆದಾಯ ಹೆಚ್ಚಳಕ್ಕೆ ಯೋಜನೆಗಳನ್ನು ರೂಪಿಸಿ, ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕನಕದಾಸರ ಕರ್ಮಭೂಮಿ ಕಾಗಿನೆಲೆ ಮತ್ತು ಜನ್ಮಭೂಮಿ ಸ್ಥಳವಾದ ಬಾಡ ಗ್ರಾಮ ಹಾಗೂ ಸುತ್ತಮುತ್ತಲಿನ ಪರಂಪರೆಯ ತಾಣಗಳನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಗೊಳಿಸುವ ಬಗ್ಗೆ ವಿವಿಧ ಯೋಜನೆಗಳ ಕ್ರಿಯಾ ಯೋಜನೆ ಅನುಮೋದನೆಗೆ ಸಲ್ಲಿಸಲಾಯಿತು.
ಪ್ರಾಧಿಕಾರದ ವ್ಯಾಪ್ತಿಯ ಉದ್ಯಾನಗಳ ವಾರ್ಷಿಕ ನಿರ್ವಹಣೆ ಗುತ್ತಿಗೆ ನೀಡುವ ಕುರಿತು ಹಾಗೂ ಕನಕ ಪರಿಸರ ಉದ್ಯಾನದಲ್ಲಿ ಖಾಲಿ ಇರುವ ಜಾಗದಲ್ಲಿ ಬಟಾನಿಕಲ್ ಗಾರ್ಡನ್ ನಿರ್ಮಿಸಲು ನಿರ್ಧರಿಸಲಾಯಿತು. ಕಾಗಿನೆಲೆ ಗ್ರಾಮದ ವ್ಯಾಪ್ತಿಯಲ್ಲಿ ಇತರ ಅಭಿವೃದ್ಧಿ ಕಾಮಗಾರಿಗಳ ಜಾರಿಗೆ ಶೀಘ್ರ ಕ್ರಮ ವಹಿಸಲಾಗುವುದು ಎಂದರು.

ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕಲಾಭವನ ನಿರ್ಮಾಣ, ಕನಕ ವಸ್ತು ಸಂಗ್ರಹಾಲಯದಲ್ಲಿ ಒಳವಸ್ತು ಶಿಲ್ಪ ಸಂಗ್ರಹಾಲಯ ನಿರ್ಮಾಣ, ಚೆನ್ನಕೇಶವ ದೇವಾಲಯ, ಮೆಟ್ಟಿಲು, ಗೋಪುರ, ಕಮಾನುಗಳ ನಿರ್ಮಾಣ, ಕದರಮಂಡಲಗಿ ವೆಂಕಟೇಶ್ವರ ದೇವಸ್ಥಾನ, ಸಮುದಾಯ ಭವನ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮದ್, ಸಚಿವರಾದ ಶಿವಾನಂದ ಪಾಟೀಲ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ. ರೇವಣ್ಣ, ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.
Related









