ಕೊಪ್ಪಳ: ಬಸ್- ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟ್ರ್ಯಾಕ್ಟರ್‌ನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಹೊಸಳ್ಳಿ ಗ್ರಾಮದ ಬಳಿ ತಡರಾತ್ರಿ ನಡೆದಿದೆ.
ಅಪಘಾತದಲ್ಲಿ ಕರಮುಡಿ ಗ್ರಾಮದ ಬಸವರಾಜ (22), ಮುತ್ತಪ್ಪ (22), ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ನಿವಾಸಿ ಕೊಂಡಪ್ಪ (60) ಮತ್ತು ದುರುಗಮ್ಮ ಹನುಮಪ್ಪ (65) ಎಂಬುವರು ಮೃತಪಟ್ಟಿದ್ದಾರೆ.
ಹುಲಗಿಯ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದು ಯಲಬುರ್ಗಾ ತಾಲೂಕಿನ ಕರಮುಡಿ ಗ್ರಾಮಕ್ಕೆ ವಾಪಸ್ ಬರುತ್ತಿದ್ದಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಜರುಗಿದೆ.
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ. ಇನ್ನೊಬ್ಬರು ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯೆ ಸಾವನ್ನಪ್ಪಿದ್ದು ಮತ್ತೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅಪಘಾತದಿಂದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದರೆ, ಇನ್ನೂ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ತಡರಾತ್ರಿಯ ತನಕ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಲಾಗಿದ್ದು ಕೆಲವರನ್ನು ಹೊರರೋಗಿಗಳಾಗಿ ದಾಖಲಿಸಿಕೊಂಡು ಚಿಕಿತ್ಸೆ ಕೊಡಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಇನ್ನು ಘಟನೆ ಸಂಬಂಧ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)