KSRTC ಬಸ್ ನಿಲ್ದಾಣಗಳ ಶೌಚಾಲಯಗಳ ಸ್ವಚ್ಛತೆ ಬಗ್ಗೆ ತಪಾಸಣೆ ನಡೆಸಿ: ಅಧಿಕಾರಿಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಾಕೀತು

ಮೈಸೂರು: ಸಾಂಸ್ಕೃತಿಕ ರಾಜಧಾನಿ ಮೈಸೂರು ನಗರ ಬೆಳೆಯುತ್ತಿದೆ. ಹೀಗಾಗಿ ನಗರದ ಹೊರ ವಲಯದ ರಿಂಗ್ ರಸ್ತೆಗಳಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಟ್ರಿಪ್ಗಳ ಬೇಡಿಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ 4 ಹೊಸ ಬಸ್ ನಿಲ್ದಾಣಕ್ಕೆ ಸ್ಥಳ ಗುರುತಿಸಲು ಯೋಜಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ನಗರದ ಮೈಸೂರು ದಕ್ಷಿಣ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಕೆಎಸ್ಆರ್ಟಿಸಿ ವತಿಯಿಂದ ಮೈಸೂರು ಜಿಲ್ಲೆಗೆ 100 ವಿದ್ಯುತ್ ಚಾಲಿತ ಬಸ್ಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಇದರ ನಿರ್ವಹಣೆಗಾಗಿ ಬನ್ನಿಮಂಟಪದ ಡಿಪೋದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ತಗಡೂರಿನಲ್ಲಿ ಬಸ್ ನಿಲ್ದಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಇನ್ನು 120 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ವಾಗುತ್ತಿರುವ ಮೈಸೂರು ಹೊಸ ಗ್ರಾಮಾಂತರ ಬಸ್ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದೆ ಅದನ್ನು ಶೀಘ್ರದಲ್ಲೇ ಮುಗಿಸಿ ಸಾರ್ವಜನಿಕರಿಗೆ ಅರ್ಪಿಸಲಾಗುವುದು ಎಂದು ಹೇಳಿದರು.
ಶೌಚಾಲಯಗಳಿಗೆ ಭೇಟಿ ನೀಡಿ ತಪಾಸಣೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣಗಳಲ್ಲಿ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಬಸ್ ನಿಲ್ದಾಣಗಳ ಶೌಚಾಲಯಗಳಿಗೆ ಭೇಟಿ ನೀಡಿ ತಪಾಸಣೆ ನಡಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
648 ಕೋಟಿ ರೂ. ಸಂಗ್ರಹ: ಮೈಸೂರು ವಿಭಾಗದ ವ್ಯಾಪ್ತಿಯ ಪ್ರಾದೇಶಿಕ ಸಾರಿಗೆ ಇಲಾಖೆ ವ್ಯಾಪ್ತಿಯಲ್ಲಿ 2025 ಏಪ್ರಿಲ್ನಿಂದ ಅಕ್ಟೋಬರ್ವರೆಗೆ 648 ಕೋಟಿ ರೂ. ರಾಜಸ್ವ ಸಂಗ್ರಹಿಸಲಾಗಿದೆ. ತಪಾಸಣೆ ವೇಳೆ 15.17 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದ ಅವರು, ಆರ್ಟಿಒ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ವಾಹನ ಚಾಲನಾ ತರಬೇತಿ ಶಾಲೆಯವರು ಬರುವ ಚಾಳಿಯಿದ್ದು, ಇದಕ್ಕೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಚ್ಚರಿಕೆ ವಹಿಸಿ ಎಂದು ಕಿವಿಮಾತು ಹೇಳಿದರು.
ಪ್ರಾದೇಶಿಕ ಸಾರಿಗೆ ಇಲಾಖೆಯ 31 ಸೇವೆಗಳನ್ನು ಸಕಾಲದಲ್ಲಿ ಆನ್ಲೈನ್ ಮೂಲಕ ನೀಡಲಾಗುತ್ತಿದೆ. ಸಾರ್ವಜನಿಕರು ಅನಿವಾರ್ಯವಾಗಿ ಕಚೇರಿಗೆ ಅಲೆದಾಡುವುದು ಬೇಕಿಲ್ಲ. ಸಕಾಲ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.
ಅಪರ ಸಾರಿಗೆ ಆಯುಕ್ತೆ ಓಂಕಾರೇಶ್ವರಿ ಅವರು ಮೈಸೂರು ವಿಭಾಗದ ಪ್ರಗತಿಯ ಬಗ್ಗೆ ಸಭೆಯಲ್ಲಿ ಸಚಿವರಿಗೆ ವಿವರಿಸಿದರು. ಜಂಟಿ ಸಾರಿಗೆ ಆಯುಕ್ತ ಹಾಗೂ ಮೈಸೂರು ದಕ್ಷಿಣ ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಂತ್ ಚೌಹಣ್, ಮೈಸೂರು ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಧುರ, ಉಪ ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಚಂದ್ರ, ಮೈಸೂರು ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಬಿ. ಶ್ರೀನಿವಾಸ್, ಮೈಸೂರು ನಗರ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Related









