ತುಮಕೂರು: ಬೆಂಗಳೂರಿನಿಂದ ಗೋವಾ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಮೂವರು ಮಹಿಳಾ ಪ್ರಯಾಣಿಕರು ಮೃತಪಟ್ಟಿದ್ದು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಿಡ್ಜ್ ಬಳಿ ನಡೆದಿದೆ.
ಸೋಮವಾರ (ಡಿ.2) ಮುಂಜಾನೆ ನಡೆದ ಅಪಘಾತದಲ್ಲಿ ಸಿಂಬಾಳಿ ಸಿಂಗ್, ಊರ್ವಿ ಹಾಗೂ ಪ್ರಿಯಾಂಕಾ ಮೃತಪಟ್ಟ ಮಹಿಳೆಯರು ಎಂದು ಗುರುತಿಸಲಾಗಿದೆ. ಇನ್ನು ಗಾಯಗೊಂಡಿರುವ 20ಕ್ಕೂ ಹೆಚ್ಚು ಮಂದಿಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತೀವ್ರವಾಗಿ ಗಾಯಗೊಂಡಿರುವವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾಸ್ಪತ್ರೆ ಹಾಗೂ ಸಿದ್ಧಗಂಗಾ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಿಡ್ಜ್ ಬಳಿ ರಾಷ್ಟೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದೆ. ಸನ್ ರೈಸರ್ಸ್ ಎಂಬ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ಅವಘಡ ಸಂಭವಿಸಿದೆ.
ಅಪಘಾತವಾಗಿದ್ದರಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಸ್ಥಳೀಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿ ಹಾಗೂ ವಾಹನ ದಟ್ಟಣೆ ತೆರವುಗೊಳಿಸಿದರು.
ಅಪಘಾತ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.