ಬೆಂಗಳೂರು: ಕೇಂದ್ರದ ಎನ್ಡಿಎ ಸರ್ಕಾರದ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬೆಂಗಳೂರಿಗೆ ಬಂದ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ ದೊರೆಯಿತು.
ಕೇಂದ್ರ ಸಚಿವರಾದ ಮೇಲೆ ರಾಜ್ಯಕ್ಕೆ ಮೊದಲ ದಿನ ಬಂದ ಅವರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅದ್ದೂರಿ ಸ್ವಾಗತ ಕೋರಲಾಯಿತು. ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ, ಸಂಸದ ಮಲ್ಲೇಶ್ ಬಾಬು, ನಿಸರ್ಗ ನಾರಾಯಣಸ್ವಾಮಿ ಸ್ವಾಗತಿಸಿದರು. ಇದೇ ವೇಳೆ ಆ್ಯಪಲ್, ಮೂಸಂಬಿ ಹಾರ ಹಾಕಿ ಕಾರ್ಯಕರ್ತರು ಸಂಭ್ರಮಿಸಿದರು.
ವಿಮಾನ ಇಳಿದು ಬರುತ್ತಿದ್ದಂತೆ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಕೇಂದ್ರ ಸಚಿವರನ್ನು ಬರಮಾಡಿಕೊಳ್ಳಲು ಮುಗಿಬಿದ್ದರು. ಹೂ ಮಾಲೆ ಹಾಕಿ, ಪುಷ್ಪ ಗುಚ್ಛ ನೀಡಿ ಸ್ವಾಗತಿಸಿದರು. ಈ ವೇಳೆ ಸ್ಥಳದಲ್ಲಿ ತಳ್ಳಾಟ ನೂಕಾಟವಾಯಿತು.
ಹೀಗಾಗಿ ಸಿಐಎಸ್ಎಫ್ ಏರ್ಪೋರ್ಟ್ ಭದ್ರತಾ ಸಿಬ್ಬಂದಿ ಜೆಡಿಎಸ್ ಕಾರ್ಯಕರ್ತರನ್ನ ಚದುರಿಸಿದರು. ನಂತರ ಬೆಂಗಳೂರಿನತ್ತ ಹೊರಟ ಕುಮಾರಸ್ವಾಮಿ ಅವರಿಗೆ ವಿಮಾನ ನಿಲ್ದಾಣದ ಸಾದಹಳ್ಳಿ ಟೋಲ್ ಬಳಿ ಸಾವಿರಾರು ಮಂದಿ ಜೆಡಿಎಸ್ ಕಾರ್ಯಕರ್ತರು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಸ್ವಾಗತ ಕೋರಿದರು.
ಜೆಸಿಬಿ ಹಾಗೂ ಕ್ರೇನ್‌ಗಳ ಮೂಲಕ ಬೃಹತ್ ಸೇಬಿನ ಹಾರ ಹೂ ಮಾಲೆ ಹಾಕಿ ನಾಯಕನ ಪರ ಘೋಷಣೆ ಕೂಗಿದರು. ಆ ಬಳಿಕ ಮಾತನಾಡಿದ ಕುಮಾರಸ್ವಾಮಿ, ಪ್ರಧಾನಿ ಮೋದಿ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಕೇಂದ್ರ ಸಚಿವನಾದ ಬಳಿಕ ನನ್ನ ಕರ್ಮ ಭೂಮಿಗೆ ಬಂದಿದ್ದೇನೆ.
ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸ್ತೇನೆ. ವಿಶೇಷವಾಗಿ ರಾಮನಗರ, ಮಂಡ್ಯ ಜಿಲ್ಲೆಯ ಜನರಿಗೆ ಅಭಿನಂದನೆ. ಜೆಡಿಎಸ್ ಮುಗಿಸಿದ್ದೇವೆ ಎಂದು ಮಾತನಾಡುವವರಿಗೆ ಉತ್ತರ ಕೊಡಲ್ಲ. ದುರಹಂಕಾರದಲ್ಲಿ ಮಾತನಾಡಿದ್ದವರಿಗೆ ನಾನು ಉತ್ತರ ಕೊಡಲ್ಲ. ನನಗೆ ಬೇಕಾಗಿದ್ದು ರಾಜಕೀಯ ಅಲ್ಲ, ರಾಜ್ಯದ ಜನರ ಸಮಸ್ಯೆಗೆ ಪರಿಹಾರ ಎಂದರು.
ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಎರಡು ದೊಡ್ಡ ಖಾತೆಗಳ ಜವಾಬ್ದಾರಿ ಕೊಟ್ಟಿದ್ದಾರೆ ಹೀಗಾಗಿ 4 ದಿನ ದೆಹಲಿಯಲ್ಲಿ ಕೆಲಸ, ಇನ್ನೆರಡು ದಿನ ಕರ್ನಾಟಕದಲ್ಲಿ ಇರುತ್ತೇನೆ ಎಂದು ಹೇಳಿದರು.