ವಿಶಾಖಪಟ್ಟಣಂ: ಜನವರಿ 19 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿರುವ ವಂದೇ ಭಾರತ್ ಎಕ್ಸ್ಪ್ರೆಸ್ ಕೋಚ್ನ ಎರಡು ಕಿಟಕಿಯ ಗಾಜುಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಬುಧವಾರ ಸಂಜೆ 6.30 ಕ್ಕೆ ವಿಶಾಖಪಟ್ಟಣಂನ ಕಂಚರಪಾಲೆಂ ಬಳಿ ರೈಲು ನಿರ್ವಹಣೆಗಾಗಿ ನಿಂತಿದ್ದಾಗ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ.
ಈ ಘಟನೆ ನಡೆದಿರುವುದು ಅತ್ಯಂತ ದುರದೃಷ್ಟಕರ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅನುಪ್ ಕುಮಾರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇನ್ನು ಈ ರೈಲು ಸಿಕಂದರಾಬಾದ್ ಮತ್ತು ವಿಶಾಖಪಟ್ಟಣಂ ನಡುವೆ ಚಲಿಸಲಿದೆ. ವಾರಂಗಲ್, ಖಮ್ಮಂ, ವಿಜಯವಾಡ ಮತ್ತು ರಾಜಮಂಡ್ರಿಯಲ್ಲಿ ನಿಲುಗಡೆಯಿದೆ.
ಆದರೆ, ಚಾಲನೆಗೂ ಮುಂಚೆಯೇ ಈ ರೀತಿ ರೈಲನ್ನು ವಿರೂಪಗೊಳಿಸಿರುವುದು ಅತ್ಯಂತ ನೋವಿನ ಸಂಗತಿ ಎಂದು ಬಿಜೆಪಿಯ ಮುಖಂಡರು ಹೇಳುತ್ತಿದ್ದು ಕಿಡಿಗೇಡಿಗಳನ್ನು ಪತ್ತೆಹಚ್ಚಿ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.