ಮೈಸೂರು: ನಮ್ಮಲ್ಲಿ ಒಳಜಗಳ ಗಿಳಜಗಳ ಯಾವುದೂ ಇಲ್ಲ. ಒಂದು ವೇಳೆ ಇದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ನಾವು ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿತ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ನಗರದ ಮಂಡಕ್ಕಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು (ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ವೇಳೆ ಕಾಂಗ್ರೆಸ್‌ನಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ರಾಜಕೀಯವಾಗಿಯಷ್ಟೇ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಇನ್ನು ಈ ಬಾರಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆತಿತ್ತು ಎಂದ ಅವರು, ಈಗ ಪರಿಷತ್ ಚುನಾವಣೆಯಲ್ಲೂ ಉತ್ತಮ ವಾತಾವರಣವಿದೆ ಎಂದು ತಿಳಿಸಿದರು.
ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ರಾಜಕೀಯವಾಗಿ ಪ್ರಬುದ್ಧರಾಗಿರುವವರು. ಯಾವುದು ಸರಿ, ಯಾವುದು ತಪ್ಪು ಎನ್ನುವ ಬಗ್ಗೆ ಅರಿವು ಹೊಂದಿದವರು. ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ತುಲನೆ ಮಾಡುವ ಶಕ್ತಿ ಅವರಿಗಿದೆ ಎಂದು ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದರು.
ಇನ್ನು ಕುಮಾರಸ್ವಾಮಿಯವರದ್ದು ಸದಾ ಹಿಟ್ ಅಂಡ್ ರನ್ ಕೇಸ್ ಎಂದು ಕುಮಾರಸ್ವಾಮಿ ಅವರು ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಪೆನ್ ಡ್ರೈವ್ ಇದ್ದು, ತನಿಖೆ ಮಾಡಿಸುವ ತಾಕತ್ತು ಸರ್ಕಾರಕ್ಕಿದೆ ಎಂದರೆ ಬಿಡುಗಡೆ ಮಾಡುತ್ತೇವೆ ಎಂದು ನೀಡಿರುವ ಹೇಳಿಕೆ ಬಗ್ಗೆ ವ್ಯಂಗ್ಯವಾಡಿದರು.
ಕರ್ನಾಟಕದಲ್ಲಿ ಆಪರೇಷನ್ ಕಮಲ ಆಗಲಿದೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಬದಲು ಅವರ ಸರ್ಕಾರವನ್ನು ಮೊದಲು ಉಳಿಸಿಕೊಳ್ಳಲಿ ಎಂದು ಗರಂ ಆದರು.