ನ್ಯೂಡೆಲ್ಲಿ: ಲೋಕಸಭಾ ಚುನಾವಣೆ ವೇಳೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಕುರಿತು ಸುಪ್ರೀಂ ಕೋರ್ಟ್ ಮಂಗಳವಾರ (ಏ.30) ಜಾರಿ ನಿರ್ದೇಶನಾಲಯವನ್ನು ಪ್ರಶ್ನಿಸಿದ್ದು, ಶುಕ್ರವಾರದೊಳಗೆ ಪ್ರತಿಕ್ರಿಯೆ ನೀಡಬೇಕೆಂದು ಇಡಿಗೆ ಸೂಚಿಸಿದೆ.
ವಿಚಾರಣೆಯ ಸಂದರ್ಭದಲ್ಲಿ ಮಾರ್ಚ್ 21ರಂದು ಇಡಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಸಲ್ಲಿಸಿದ ವಾದವನ್ನು ನ್ಯಾಯಾಲಯ ಪರಿಗಣಿಸಿದೆ.
ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಸಮಯ ಕುರಿತು ಪ್ರತಿಕ್ರಿಯಿಸುವಂತೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರನ್ನು ಕೇಳಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ನ್ಯಾಯಪೀಠ, ಜೀವನ ಮತ್ತು ಸ್ವಾತಂತ್ರ್ಯವು ಅತ್ಯಂತ ಮಹತ್ವದ್ದಾಗಿದೆ. ಅದನ್ನು ನೀವು ಅಲ್ಲಗಳೆಯುವಂತಿಲ್ಲ ಎಂದು ಹೇಳಿದೆ.
ಇನ್ನು ಲೋಕಸಭಾ ಚುನಾವಣೆಗೂ ಮುನ್ನವೇ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲು ಕಾರಣ ಏನು ಎಂದು ಕೋರ್ಟ್ ಪ್ರಶ್ನಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರು ಶುಕ್ರವಾರದವರೆಗೆ ಗಡುವು ತೆಗೆದುಕೊಂಡಿದ್ದಾರೆ.
ಸಿಎಂ ಅರವಿಂದ್ ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಅಕ್ರಮ ಹಣ ವರ್ಗಾವಣೆಯ ಬಗ್ಗೆ ಸಾಕ್ಷಿಗಳು ಇಲ್ಲ. ಈ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನೇರವಾಗಿ ಭಾಗಿಯಾಗಿದ್ದಾರೆ ಎಂಬುವುದಕ್ಕೆ ದಾಖಲೆಗಳೇ ಇಲ್ಲ ಆದರೂ ಬಂಧಿಸಿರುವುದು ಏಕೆ ಎಂಬುದಕ್ಕೆ ಇಡಿ ಸಹಕಾರಣ ನೀಡಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯವು ಬಂಧಿಸಿದ್ದು, ಅವರು ಏಪ್ರಿಲ್ 1ರಿಂದ ತಿಹಾರ್ ಜೈಲಿನಲ್ಲಿದ್ದಾರೆ. ಮೇ 7ರವರೆಗೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.