ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗಾಗಿ ಇದೇ ಡಿ.31ರಿಂದ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು (ಡಿ.29) ಸಂಜೆ 6.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸಭೆ ಕರೆದಿದ್ದಾರೆ.
ಸಾರಿಗೆ ಸಂಸ್ಥೆಯ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ. 31ರಿಂದ ಮುಷ್ಕರ ನಡೆಸಲು ಮುಂದಾಗಿರುವಾಗಲೇ ಮುಷ್ಕರವನ್ನು ತಡೆಯಲು ಎಲ್ಲ ರೀತಿಯ ಪ್ರಯತ್ನಗಳನ್ನು ಸಾರಿಗೆ ಇಲಾಖೆ ನಡೆಸಿದ್ದು, ಈ ಹಿನ್ನೆಲೆಯಲ್ಲೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಸಭೆ ನಡೆಸಲಿಸಡ. ಈ ಸಭೆಯ ನಂತರ ಸಾರಿಗೆ ನೌಕರರು ಮುಷ್ಕರಕ್ಕಿಳಿಯುತ್ತಾರೆಯೇ ಇಲ್ಲವೇ ಎಂಬುದು ನಿರ್ಧಾರವಾಗಲಿದೆ.
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆಯ ಜಂಟಿ ಕ್ರಿಯಾ ಸಮಿತಿ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದೆ. ಈ ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನಿನ್ನೆ 4 ನಿಗಮಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಿ ನೌಕರರ ಬೇಡಿಕೆಗಳ ಈಡೇರಿಕೆ ಹಾಗೂ ನಿಗಮದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಿದ್ದರು.
ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು ಮುಷ್ಕರವನ್ನು ಹಿಂಪಡೆಯುವಂತೆ ಸಂಘಟನೆಗಳಿಗೆ ಸಚಿವ ರಾಮಲಿಂಗಾರೆಡ್ಡಿ ಈಗಾಗಲೇ ಮನವಿ ಮಾಡಿದ್ದಾರೆ. ಬೇಡಿಕೆ ಈಡೇರಿಕೆಗೆ ಸರ್ಕಾರದಿಂದ ನೆರವು ಪಡೆಯುವ ಬಗ್ಗೆಯೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಇಂದು ಸಂಜೆ ಸಭೆ ನಡೆಸಲಿದ್ದು, ಸಭೆಯ ನಂತರ ಸಾರಿಗೆ ನೌಕರರ ಮುಷ್ಕರ ನಡೆಯುತ್ತದೆಯೇ ಇಲ್ಲವೇ ಎಂಬುದು ನಿರ್ಧಾರವಾಗಲಿದೆ.
ಇಟ್ಟಿರುವ ಬೇಡಿಕೆ ಈಡೇರಿಕೆಗೆ ಪಟ್ಟು ಹಿಡಿದಿದ್ದು, ಬೇಡಿಕೆ ಈಡೇರದಿದ್ದರೆ ಮುಷ್ಕರ ನಡೆಸಿಯೇ ತೀರುತ್ತೇವೆ ಎಂದು ಹೇಳಿದ್ದಾರೆ. ಹಾಗಾಗಿ ಸಾರಿಗೆ ಕಾರ್ಮಿಕರ ಮುಷ್ಕರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ನಾಳೆ ಕಾರ್ಮಿಕ ಆಯುಕ್ತರ ಸಭೆ: ಡಿಸೆಂಬರ್ 31ರಿಂದ ನಡೆಯಲಿರುವ ರಾಜ್ಯ ಸಾರಿಗೆ ಇಲಾಖೆಯ ನೌಕರರ ಅನಿರ್ದಿಷ್ಟಾವಧಿಯ ಮುಷ್ಕರದ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಆಯುಕ್ತರ ನೇತೃತ್ವದಲ್ಲಿ ನಾಳೆ (ಡಿ.30) ಸಭೆ ನಡೆಯಲಿದೆ.
ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಸದಸ್ಯರನ್ನೊಳಗೊಂಡ ಜಂಟಿ ಕ್ರಿಯಾ ಸಮಿತಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘದ ಮುಖಂಡ ಎಚ್.ವಿ. ಅನಂತ ಸುಬ್ಬರಾವ್ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯೊಂದಿಗೆ ನಾಳೆ ಸಭೆ ನಡೆಯಲಿದೆ.
ಸಿದ್ದರಾಮಯ್ಯ ಅವರು ಎಸ್ಮಾ ಜಾರಿಯ ಸಾಹಸಕ್ಕೆ ಕೈ ಹಾಕುವುದಿಲ್ಲ ಎಂದು ತಿಳಿದುಕೊಳ್ಳುತ್ತೇವೆ. ನಮ್ಮ ಬೇಡಿಕೆಗಳು ಈಡೇರಿಲ್ಲ. ಹಾಗಾಗಿ ಮುಷ್ಕರ ಶತಸಿದ್ಧ. ಮುಷ್ಕರ ಮಾಡಿಸುವುದು ತಪ್ಪಿಸುವುದು ಮುಖ್ಯಮಂತ್ರಿಗಳ ಕೈಯಲ್ಲಿದೆ.
1-1-2020ರಿಂದ ಆಗಿರುವ ಶೇ.15ರಷ್ಟು ವೇತನ ಹೆಚ್ಚಳದ ನಂತರದ 38 ತಿಂಗಳ ಬಾಕಿ ಹಣವನ್ನು ವಿಳಂಬವಿಲ್ಲದೆ ಪಾವತಿಸುವುದು, ಸದ್ಯ ನೌಕರರು ಪಡೆಯುತ್ತಿರುವ ವಿವಿಧ ಭತ್ಯೆಗಳನ್ನು ಐದು ಪಟ್ಟು ಹೆಚ್ಚಳ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ.