NEWSನಮ್ಮಜಿಲ್ಲೆನಮ್ಮರಾಜ್ಯ

ಬಾಕಿ ಪ್ರಕರಣ ವಿಲೇಗಾಗಿ ಅಧಿಕಾರಿಗಳಿಗೆ ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಎಲ್ಲ ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು ಹಾಗೂ ತಹಸೀಲ್ದಾರರಿಗೆ ಬಾಕಿಯಿರುವ ಕೇಸುಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಕೋಲಾರದಲ್ಲಿ ಆಯೋಜಿಸಿದ್ದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಇದೇ ಮೊದಲ ಬಾರಿಗೆ ಕೋಲಾರಕ್ಕೆ ಭೇಟಿ ನೀಡಿದ್ದು, ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಕೈಗೊಳ್ಳಲಾಗಿದೆ. ಕಂದಾಯ, ಸಮಾಜ ಕಲ್ಯಾಣ, ಕಾನೂನು, ಕುಡಿಯುವ ನೀರು, ಬರಗಾಲ ಹೀಗೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.

ಅಸಿಸ್ಟೆಂಟ್ ಕಮೀಷನರ್‌ನ ಬಳಿ 3,995 ಕೇಸುಗಳು ಬಾಕಿಯಿದ್ದು, ಅಭಿಯಾನದ ರೀತಿಯಲ್ಲಿ ಕಾರ್ಯನಿರ್ವಹಿಸಿ, ಕೇಸುಗಳನ್ನು ಇತ್ಯರ್ಥಪಡಿಸಲು ಸೂಚಿಸಲಾಗಿದೆ. ಖಾತೆ, ಸರ್ವೆ, ಪೋಡಿಗಳು ಸರಿಯಾಗಿ ಆಗದಿರುವ ಕಾರಣ ಸಹಾಯಕ ಆಯುಕ್ತರು, ತಹಸೀಲ್ದಾರರ ಬಳಿ ಪ್ರಕರಣಗಳು ಬಾಕಿ ಉಳಿದಿವೆ. ಆದ್ದರಿಂದ ಗ್ರಾಮ ಲೆಕ್ಕಿಗರು, ಕಂದಾಯ ಅಧಿಕಾರಿಗಳು, ತಹಸೀಲ್ದಾರರು, ಸಹಾಯಕ ಆಯುಕ್ತರು ತಮ್ಮ ತಮ್ಮ ಹಂತದಲ್ಲಿ ಕೆಲಸವನ್ನು ಮಾಡಬೇಕು. ಜನರ ಕೈಗೆ ಅಧಿಕಾರಿಗಳು ಸಿಗದಿರುವುದು ಸಮಸ್ಯೆಯಾಗಿದ್ದು, ಜನರ ಭೇಟಿಗೆ ಸಮಯ ನಿಗದಿಪಡಿಸಬೇಕು ಎಂದು ತಿಳಿಸಿದರು.

ಇನ್ನು ಮುಂದಿನ ಬಜೆಟ್‌ನಲ್ಲಿ ಕೋಲಾರ ಜಿಲ್ಲೆಯಲ್ಲಿ ಮೊರಾರ್ಜಿ ವಸತಿ ಶಾಲೆಗಳನ್ನು ಹೊಂದಿಲ್ಲದ ಹೋಬಳಿಗಳಿಗೆ ಶಾಲೆ ಮಂಜೂರು ಮಾಡಲಾಗುವುದು ಹಾಗೂ ಮೊರಾರ್ಜಿ ವಸತಿ ಶಾಲೆಗಳು ಸೇರಿದಂತೆ ವಿವಿಧ ಹಾಸ್ಟೆಲ್‌ಗಳ ಮೇಲುಸ್ತುವಾರಿ ಮಾಡಲು ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.

ಕೆ.ಸಿ ವ್ಯಾಲಿ ಮೂರನೇ ಹಂತದ ಶುದ್ಧೀಕರಣ ಯೋಜನೆ ಇನ್ನೂ ಚರ್ಚೆಯ ಹಂತದಲ್ಲಿದೆ. ಎರಡನೇ ಹಂತ ಶುದ್ಧೀಕರಣ ಮಾಡಲಾಗುತ್ತಿದ್ದು, ಕೆರೆ ತುಂಬಿಸಲು ನೀರು ಬಳಸಲಾಗುವುದು. ಎತ್ತಿನಹೊಳೆ ಯೋಜನೆ ಕುಡಿಯುವ ನೀರಿನ ಯೋಜನೆಯಾಗಿದ್ದು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು , ಅರಸೀಕೆರೆಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತದೆ. ಕಾಮಗಾರಿಗಳನ್ನು ತ್ವರಿತಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ಅಪ್ರಾಪ್ತ ಹೆಣ್ಣುಮಕ್ಕಳ ಮದುವೆ ತಡೆಯಬೇಕು: ಅಪ್ರಾಪ್ತ ಹೆಣ್ಣುಮಕ್ಕಳ ಮದುವೆ ತಪ್ಪಿಸಬೇಕು, ಇಂತಹ ಪ್ರಕರಣಗಳು ನಿಲ್ಲದೇ ಹೋದರೆ ಸಂಬಂಧಪಟ್ಟವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಪೊಲೀಸರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಮಾಜ ಕಲ್ಯಾಣ ಇಲಾಖೆ ಜವಾಬ್ದಾರಿಯಾಗಿದೆ. ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸಲು ಹಾಗೂ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ತಹಸೀಲ್ದಾರರ ಕಚೇರಿಯಲ್ಲಿ ತಾಲೂಕುವಾರು ಸರ್ಕಾರಿ ಜಮೀನು ಒತ್ತುವರಿ ಆಗಿರುವ ಬಗ್ಗೆ ಒತ್ತುವರಿ ತೆರವುಗೊಳಿಸಿರುವ ಬಗ್ಗೆ ಮಾಹಿತಿಯನ್ನು ನೀಡಬೇಕು. ಎಷ್ಟೇ ಪ್ರಭಾವಿಗಳಿದ್ದರೂ, ಅವರಿಂದ ಒತ್ತುವರಿಯಾಗಿರುವ ಕೆರೆ ಮತ್ತು ಸರ್ಕಾರಿ ಭೂಮಿಯನ್ನು ತೆರವುಗೊಳಿಸಲು ಸೂಚಿಸಲಾಗಿದೆ. ಅರಣ್ಯ ಇಲಾಖೆಯವರೊಂದಿಗೆ ಸಂಯೋಜಿಸಿ ಸರ್ಕಾರಿ ಭೂಮಿ ಮತ್ತು ಅರಣ್ಯ ಭೂಮಿಯ ಯಾವುವು ಎಂಬ ಬಗ್ಗೆ ಜಂಟಿ ಸರ್ವೇ ನಡೆಸಿ, ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಬರಗಾಲ ಪೀಡಿತ ಎಂದು ಘೋಷಿಸಲಾಗಿದೆ: ಕೋಲಾರ ಜಿಲ್ಲೆಯ 6 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಿಸಲಾಗಿದೆ. ಟ್ಯಾಂಕರ್ ಮೂಲಕ ನೀರು ನೀಡುವ ಪರಿಸ್ಥಿತಿ ಇನ್ನೂ ಉದ್ಭವಿಸಿಲ್ಲ. ಕುಡಿಯುವ ನೀರಿನ ಸಮಸ್ಯೆ ಇಡೀ ಜಿಲ್ಲೆಯಲ್ಲಿ ಇಲ್ಲ. ಕುಡಿಯುವ ನೀರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಸಿಇಒಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅದಕ್ಕೆ ಬೇಕಾಗುವ ಅನುದಾನವನ್ನು ಸರ್ಕಾರ ಪೂರೈಸಲಿದೆ. ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಹೊಸ ಬೋರ್‌ವೆಲ್‌ಗಳನ್ನು ಕೊರೆಸಬಹುದೆಂದು ಸೂಚಿಸಲಾಗಿದೆ ಎಂದು ಹೇಳಿದರು.

ಇನ್ನು ಕೆ.ಸಿವ್ಯಾಲಿ ನಂತರ ಕೆರೆಗಳಿಗೆ ನೀರು ತುಂಬಿ, ಭೂಮಿಯ ಅಂತರ್ಜಲ ಮಟ್ಟ ಸುಧಾರಿಸಿದೆ. ಇದರಿಂದ ವ್ಯವಸಾಯ, ಕುಡಿಯುವ ನೀರಿಗೆ ಅನುಕೂಲವಾಗಿದೆ. ಮೇವಿನ ಕೊರತೆ ಇಲ್ಲ. 18 ವಾರಗಳಿಗೆ ಪೂರೈಸಬಹುದಾದಷ್ಟು ಮೇವಿನ ಲಭ್ಯತೆ ಇದೆ. ಮೇವು ಕಿಟ್ ಖರೀದಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ನರೇಗಾ ಯೋಜನೆಯಡಿ ಮಾನವ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸಲು ಕೇಂದ್ರ ಸರ್ಕಾರದ ಅನುಮತಿ ಬೇಕಿದೆ. ರಾಜ್ಯ ಸರ್ಕಾರ ಮನವಿ ಸಲ್ಲಿಸಿ ಮೂರು ತಿಂಗಳು ಕಳೆದರೂ, ಈ ಬಗ್ಗೆ ಕೇಂದ್ರದಿಂದ ಸ್ಪಂದನೆ ದೊರೆತಿಲ್ಲ. ಜನರ ಗುಳೆ ಹೋಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಈ ಮನವಿಯನ್ನು ಮಾಡಿತ್ತು ಎಂದು ತಿಳಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು