ಚಿತ್ರದುರ್ಗ: ಕೋವಿಡ್-19 ಸೋಂಕು ಮುಕ್ತ ರಾಜ್ಯವನ್ನಾಗಿಸಲು ರಾಜ್ಯದ ಡೇಂಜರ್ ಜೋನ್ ಹಾಗೂ ಕಂಟೈನ್ಮೆಂಟ್ ಏರಿಯಾಗಳಲ್ಲಿ 108 ಆ್ಯಂಬುಲೆನ್ಸ್ ಬಳಸಿಕೊಂಡು, ಫೀವರ್ ಕ್ಲಿನಿಕ್ಗಳಲ್ಲಿ ಜ್ವರ ತಪಾಸಣೆ ಮಾಡಲು ಯೋಜಿಸಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು.
ಮೊಳಕಾಲ್ಮೂರು ಪಟ್ಟಣದ ಪಟ್ಟಣ ಪಂಚಾಯತ್ ಕಚೇರಿ ಆವರಣದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಪೌರಕಾರ್ಮಿಕರಿಗೆ ನಿತ್ಯ ಬಳಕೆಯ ದಿನಸಿ ಸಾಮಗ್ರಿ ಕಿಟ್ ವಿತರಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಲಾಕ್ಡೌನ್ ಅವಧಿಯನ್ನು ವಿಸ್ತರಣೆ ಮಾಡಬೇಕೋ, ಸಡಿಲಿಕೆ ಮಾಡಬೇಕೋ ಎನ್ನುವ ಬಗ್ಗೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಕೇಂದ್ರ ಸರ್ಕಾರದ ನಿರ್ಧಾರವನ್ನು ಗಮನಿಸಿದ ಬಳಿಕವೇ ಮೇ. 03 ರ ಬಳಿಕ ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಣೆ ಅಥವಾ ಸಡಿಲಿಕೆ ಕುರಿತಂತೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರದ ನಿರ್ದೇಶನದಂತೆ ಮೇ 3 ರವರೆಗೆ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಸದ್ಯದ ಸನ್ನಿವೇಶದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಪ್ರಶ್ನೆಯೇ ಇಲ್ಲ. ಸೀಲ್ಡೌನ್ ಮಾಡಿರುವ ಹಾಗೂ ಕಂಟೈನ್ಮೆಂಟ್ ಪ್ರದೇಶವೆಂದು ಗುರುತಿಸಲಾಗಿರುವ ಕಡೆಗಳಲ್ಲಿ ಎಲ್ಲರಿಗೂ ಜ್ವರ ತಪಾಸಣೆ ಮಾಡಲು ನಿರ್ಧರಿಸಲಾಗಿದ್ದು, ಇದಕ್ಕಾಗಿ 108 ಆಂಬುಲೆನ್ಸ್ ಬಳಕೆ ಮಾಡಲಾಗುವುದು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ಅಥವಾ ವೈದ್ಯರ ಮೇಲೆ ಹಲ್ಲೆ ಮಾಡಿದಲ್ಲಿ ಅಂತಹವರಿಗೆ 2 ಲಕ್ಷ ರೂ. ದಂಡ, 2 ವರ್ಷ ಜೈಲು ಶಿಕ್ಷೆ ನೀಡಬಹುದಾದ ವಿಶೇಷ ಕಾಯ್ದೆ ರೂಪಿಸಲಾಗಿದೆ. ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ವೈದ್ಯರು ಮತ್ತು ಆರೊಗ್ಯ ಇಲಾಖೆ ಸಿಬ್ಬಂದಿ ಸೇವಾ ವೈಖರಿ ಶ್ಲಾಘನೀಯವಾಗಿದೆ. ಜೀವದ ಹಂಗು ತೊರೆದು ಶ್ರಮ ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಹಾಗೂ ವೈದ್ಯ ಸಿಬ್ಬಂದಿ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದರು.
ಮೊಳಕಾಲ್ಮೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಕಾಂತರಾಜ್, ತಹಸಿಲ್ದಾರ್ ಬಸವರಾಜ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
![](https://vijayapatha.in/wp-content/uploads/2024/02/QR-Code-VP-1-1-300x62.png)